ದಕ್ಷಿಣಕನ್ನಡ

ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ:- ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯೆಂದು ಘೋಷಣೆ: ಸಿಎಂ ಡಿ.ಕೆ. ಶಿವಕುಮಾರ್.

ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್ ಇದರಲ್ಲಿ 16,000 ಕೋಟಿ ರೂ. ಗ್ರಾಮೀಣಾಭಿವೃದ್ಧಿ ಯೋಜನೆಯಾಗಿದ್ದು, ಉಳಿದ ಮೊತ್ತ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದೆ ಎಂದು ವಿವರಿಸಿದರು.
ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿದೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳು ಭಾಷೆ ಎರಡನೇ ಆಡಳಿತ ಭಾಷೆಯಾಗಿ ಘೋಷಣೆಯಾಗಬೇಕೆನ್ನುವ ಬೇಡಿಕೆ ಬಹಳ ದಿನಗಳದ್ದು, ಹಿಂದಿನವರು ಈ ತೀರ್ಮಾನ ಏಕೆ ಮಾಡಲಿಲ್ಲ ಎಂದು ಚರ್ಚಿಸುವುದಿಲ್ಲ, ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ ಸಭೆಯಲ್ಲಿ ಅನೇಕ ಸಲಹೆಗಳು ಬಂದಿವೆ.
ಅವಶ್ಯತೆ ಇದ್ದಲ್ಲಿ ಆರ್ಥಿಕ ಹಾಗೂ ಕಾನೂನು ಚೌಕಟ್ಟು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಸಭೆ ನಡೆಸುವ ತೀರ್ಮಾನ ಮಾಡಿ ಆಗ ಅಗತ್ಯವಿರುವ ವಿಚಾರಗಳ ಬಗ್ಗೆ ತೀರ್ಮಾನಿಸಲಾಗುವುದು. ಇದು ಟೀಮ್ ಕರ್ನಾಟಕ ಸಚಿವ ಸಂಪುಟ ನಿಮ್ಮ ಜೊತೆ ಇದೆ. ತುಳು ಭಾಷೆಯನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತವಾಗಿ ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ ಮಾಡಲಾಗುವುದು.
ತುಳು ಭಾಷೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಅಂಗೀಕರಿಸಿದ ಹಿನ್ನೆಲೆಯಲ್ಲಿ ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಮುಖ್ಯಮಂತ್ರಿಗಳು ಅಭಿನಂದಿಸಿದರು.

ಮಂಗಳೂರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಇದೆ, ದಕ್ಷಿಣ ಕನ್ನಡದ ಬದಲಿಗೆ ಮಂಗಳೂರು ಎಂದು ಹೆಸರಿಸುವ ಬಗ್ಗೆ ಜನಾಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು, ಕರಡು ಅಧಿಸೂಚನೆ ಹೊರಡಿಸಿ ಒಂದು ತಿಂಗಳ ಅವಧಿ ನೀಡಿ ಜನರ ಭಾವನೆ ಜನರ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು ಎಂದರು.
ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಈವರೆಗಿನ ಎಲ್ಲಾ ನೀತಿಗಳಿಗಿಂತ ಭಿನ್ನವಾದ ನೀತಿ ಇದಾಗಲಿದೆ. ಹೂಡಿಕೆದಾರರಿಗೆ ಹೆಚ್ಚಿನ ಶಕ್ತಿ ಹಾಗೂ ಸಾಲ ಮರುಪಾವತಿಗೆ ಸಮಯಾವಕಾಶ ನೀಡಲಾಗುವುದು, ಮಲೆನಾಡು ಒಳಗೊಂಡಂತೆ ಕರಾವಳಿ ಪ್ರದೇಶದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಮೂಲಕ ಪ್ರವಾಸೋದ್ಯಮ ಯೋಜನೆಗಳನ್ನು ಮೂಲಸೌಕರ್ಯ ಯೋಜನೆಗಳೆಂದು ಪರಿಗಣಿಸಲಾಗುವುದು, ಅಲ್ಲದೆ ಅನೇಕ ಪ್ರೋತ್ಸಾಹಕಗಳನ್ನು ನೀಡಲು ಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಮೀನುಗಾರಿಕೆಗೆ ಸಂಬಂಧಿಸಿದಂತೆ “Fisheries, Blue economy university” ಯನ್ನು ಸ್ಥಾಪಿಸಲಾಗುವುದು. ಪ್ರಸ್ತುತ ಮೀನುಗಾರಿಕಾ ಕಾಲೇಜಿನ ವಿದ್ಯಾರ್ಥಿಗಳ ಪ್ರವೇಶವನ್ನು 60 ರಿಂದ 200 ಸೀಟುಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *